ಪಲ್ಸ್‍ಪೋಲಿಯೋ ಕಾರ್ಯಕ್ರಮ : 50,558 ಮಕ್ಕಳಿಗೆ ಲಸಿಕೆ ಗುರಿ
ಲಿಂಗಸುಗೂರು : ತಾಲೂಕಿನಲ್ಲಿ ಈ ಬಾರಿ ಮಕ್ಕಳ ಸಮೀಕ್ಷೆ ಮಾಡಲಾಗಿ 50,558 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಅಮರೇಶ ಪಾಟೀಲ್ ಹೇಳಿದರು.
ಸ್ಥಳೀಯ ಸರಕಾರಿ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಸ್ಟಾಂಡ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಹಾಕಲು ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂಧಿಗಳನ್ನು ನಿಯೋಜನೆ ಮಾಡಲಾಗಿದೆ. ಮನೆ-ಮನೆಗೆ ತೆರಳಿ ಲಸಿಕೆ ಹಾಕುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಪಾಲಕರು ಸಹಕಾರ ನೀಡಬೇಕೆಂದು ಕರೆ ನೀಡಿದರು.
ಪುರಸಭೆ ಅದ್ಯಕ್ಷೆ ಗದ್ದೆಮ್ಮ ಭೋವಿ, ಉಪಾದ್ಯಕ್ಷ ಮೊಹ್ಮದ್ ರಫಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೆಯಲ್ಲಿರುವ ಐದು ವರ್ಷದೊಳಗಿನ ಮಕ್ಕಳಿಗೆ ಪಾಲಕರು ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳಿಗೆ ಭವಿಷ್ಯದಲ್ಲಿ ಬರುವ ತೊಂದರೆಯನ್ನು ನೀಗಿಸಬಹುದೆಂದು ಪುರಸಭೆ ಉಪಾದ್ಯಕ್ಷ ಮೊಹ್ಮದ್ ರಫಿ ಮಾತನಾಡಿದರು.
ತಹಸೀಲ್ದಾರ್ ಚಾಮರಾಜ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ, ಸಿಡಿಪಿಒ ಶರಣಮ್ಮ ಕಾರನೂರು, ಸರಕಾರಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಲಕ್ಷ್ಮಪ್ಪ ಸೇರಿ ಆರೋಗ್ಯ ಇಲಾಖೆ ಸಿಬ್ಬಂಧಿಗಳು ಈ ಸಂದರ್ಭದಲ್ಲಿ ಇದ್ದರು.

