ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ಡಿಸಿಎಂ ಸವದಿ ಭೇಟಿ : ಪರಿಶೀಲನೆ ‘ಹಟ್ಟಿ ಚಿನ್ನದಗಣಿಯಲ್ಲಿ 100 ಹಾಸಿಗೆ ಕೋವಿಡ್ ಆಸ್ಪತ್ರೆ ಶೀಘ್ರ ಆರಂಭ’
ಲಿಂಗಸುಗೂರು : ಸರಕಾರಿ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್‍ನಲ್ಲಿ ವೈದ್ಯರು ಜೀವದ ಹಂಗುತೊರೆದು ಕೋವಿಡ್ ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ತಾಲೂಕಿನ ಹಟ್ಟಿ ಚಿನ್ನದಗಣಿಯಲ್ಲಿ 100 ಹಾಸಿಗೆ ಆಸ್ಪತ್ರೆ ಆರಂಭಕ್ಕೆ ಬೇಡಿಕೆ ಇದ್ದು, ಇದಕ್ಕೆ ಪೂರಕವಾಗಿ ಕೆಲಸ ಆರಂಭಿಸಲಾಗಿದೆ. ಎರಡ್ಮೂರು ದಿನಗಳಲ್ಲಿ ಸಾರ್ವಜನಿಕ ಸೇವೆಗೆ ಕೋವಿಡ್ ಆಸ್ಪತ್ರೆ ಲಭ್ಯವಾಗಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಸ್ಥಳೀಯ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಕೋವಿಡ್ ಕೇರ್ ಸೆಂಟರ್‍ಗೆ ತೆರಳಿ ಸೊಂಕಿತರ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋವಿಡ್ ಸೊಂಕು ಉಲ್ಬಣಿಸುತ್ತಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ. ನಾಲ್ಕು ವೆಂಟಿಲೇಟರ್‍ಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೋವಿಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ವೈದ್ಯರಿಗೆ ಸೂಚನೆ ನೀಡಲಾಗಿದೆ. ಸೊಂಕಿಗೆ ಒಳಗಾದ ಸ್ಥಿತಿವಂತರು ಲಾಡ್ಜ್‍ಗಳಲ್ಲಿ ಐಸೋಲೇಷನ್ ಆಗಲು ಸೂಚನೆ ನೀಡಲಾಗಿದೆ. ಬಡವರು ಆಸ್ಪತ್ರೆ ಹಾಗೂ ಸಿಸಿ ಕೇಂದ್ರಗಳಲ್ಲಿ ಐಸೋಲೇಷನ್‍ಗೆ ವ್ಯವಸ್ಥೆ ಮಾಡಲಾಗಿದೆ. ಸೊಂಕಿತರು ಮನೆಗಳಲ್ಲಿ ಉಳಿದುಕೊಳ್ಳದೇ ಆಸ್ಪತ್ರೆ ಅಥವಾ ಲಾಡ್ಜ್‍ಗಳಲ್ಲಿ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯಲು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸವದಿ ಹೇಳಿದರು.
ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಿ.ಎಸ್.ಹೂಲಗೇರಿ, ಹಟ್ಟಿ ಚಿನ್ನದಗಣಿ ಅದ್ಯಕ್ಷ ಮಾನಪ್ಪ ವಜ್ಜಲ್, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ಆಸಿಫ್ ತನ್ವೀರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ, ಸಹಾಯಕ ಆಯುಕ್ತ ರಾಜಶೇಖರ ಡಂಬಳ್, ಡಿವೈಎಸ್‍ಪಿ ಎಸ್.ಎಸ್.ಹುಲ್ಲೂರು, ತಹಸೀಲ್ದಾರ್ ಚಾಮರಾಜ ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಅಮರೇಶ ಪಾಟೀಲ್, ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ, ಬಿಇಓ ಹುಂಬಣ್ಣ ರಾಠೋಡ್, ಲೋಕೋಪಯೋಗಿ ಇಲಾಖೆ ಎಇಇ ಜಗದೇವ ಮೋತಿ ಸೇರಿ ಇತರರು ಈ ಸಂದರ್ಭದಲ್ಲಿ ಇದ್ದರು.

